ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹರಿದು ಹೆಡ್ ಕಾನ್ಸ್​ಟೇಬಲ್ ಸಾವು - ಕೊಲೆ ಶಂಕೆ

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹರಿದು ಹೆಡ್ ಕಾನ್ಸ್​ಟೇಬಲ್ ಸಾವು – ಕೊಲೆ ಶಂಕೆ

ಅಕ್ರಮ ಮರಳು ಸಾಗಾಟ ತಡೆಯಲು ಹೋದ ನೆಲೋಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಮಯೂರ್ ಚೌಹಾಣ್ ಮೇಲೆ ಟ್ರ್ಯಾಕ್ಟರ್ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇದೀಗ, ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೊಲೀಸ್ ಹೆಡ್​ ಕಾನ್ಸ್​ಟೇಬಲ್ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದ್ದು, ಪರಿಣಾಮ ಸ್ಥಳದಲ್ಲೇ ಅವರು ಮೃತಪಟ್ಟಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೆಲೋಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಮಯೂರ್ ಚೌಹಾಣ್ (51) ಮೃತ ಅಧಿಕಾರಿ. ಭೀಮಾ ನದಿಯಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಹುಲ್ಲೂರ್ ಬಳಿ ಚೆಕ್ ಪೋಸ್ಟ್​ ಹಾಕಲಾಗಿತ್ತು. ರಾತ್ರಿ ಮರಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಮೈ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್​ಪಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಂತರ ಇದು ಉದ್ದೇಶಪೂರಿತವೋ ಅಥವಾ ಆಕಸ್ಮಿಕವೋ ಎನ್ನುವುದು ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾಂತ್ವನ, ಪರಿಹಾರದ ಭರವಸೆ: “ಅಕ್ರಮ ಮರುಳು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಹರಿದು ಹುಲ್ಲೂರು ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸ್ ಕಾನ್ಸ್​ಟೇಬಲ್​ ಸಾವನ್ನಪ್ಪಿರುವ ಘಟನೆ ನಡೆದಿರುವುದು ಅತ್ಯಂತ ನೋವಿನ ಸಂಗತಿ” ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಮಯೂರ ಚೌಹಾಣ್ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಕರೆ ಮಾಡಿ ಮಾತನಾಡಿ, ತನಿಖೆಗೆ ಆದೇಶಿಸಿದ್ದೇನೆ” ಎಂದಿದ್ದಾರೆ. ಬಳಿಕ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಸಚಿವರು, ಸರ್ಕಾರದ ವತಿಯಿಂದ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ದೊರಕಿಸಿ ಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ.

“ಜಿಲ್ಲೆಯಲ್ಲಿ ಅಕ್ರಮ ಮರುಳು ಸಾಗಣೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದ್ದರೂ ಕೂಡ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು ಹಾಗೂ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಆದೇಶ ನೀಡಿ, ಕೂಡಲೇ ಅಕ್ರಮ ಮರುಳು ಸಾಗಾಣಿಕೆ ವಿರುದ್ಧ ಕ್ರಮ ಜರುಗಿಸಲು ನಿರ್ದೇಶಿಸಿದ್ದೇನೆ” ಎಂದಿದ್ದಾರೆ.

Leave a Reply

Your email address will not be published. Required fields are marked *

Latest News