ಬೆಂಗಳೂರು : ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಕಲಕೇರಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಸಿಎಂ, ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದಿದ್ದಾರೆ.

ಮೃತ ದುರ್ದೈವಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.

ಮೃತರು ವಿಜಯಪುರ ಮೂಲದವರು

ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ಮೃತ ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮೀಕಾ ವಿಜಯಪುರ ಮೂಲದವರು ಎಂದು ತಿಳಿದುಬಂದಿದೆ. ಇವರು ವಿಜಯಪುರಿಂದ ಬೆಂಗಳೂರಿಗೆ ಹೊರಟಿದ್ದರು. ಕಾರಿನ ಟೈರ್ ಸ್ಫೋಟಗೊಂಡ ಹಿನ್ನಲೆ ಇನ್ನೊಂದು ರಸ್ತೆಗೆ ಬಂದು ಲಾರಿಗೆ ಡಿಕ್ಕಿ ಹೊಡೆದಿತ್ತು. ಕಾರು ಲಾರಿಯ ಮುಂಭಾಗಕ್ಕೆ ಗುದ್ದಿದ ರಭಸಕ್ಕೆ ನಜ್ಜುಗುಜ್ಜಾಗಿದೆ. ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *