ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ (87) ನಿಧನರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಡಿಬಿ ಚಂದ್ರೇಗೌಡ ಕೊನೆಯುಸಿರೆಳೆದಿದ್ದು, ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ನಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.
ಕಾಂಗ್ರೆಸ್ ಮುಖಂಡರಾಗಿದ್ದ ಚಂದ್ರೇಗೌಡ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ಚಂದ್ರೇಗೌಡ (D.B.Chandregowda) ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.
ಮೂರು ಬಾರಿ ಶಾಸಕರು, ಮೂರು ಸಲ ಸಂಸದರು, ಒಮ್ಮೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡರು, ಜಿ ಪ್ರಧಾನಿ ಇಂದಿರಾ ಗಾಂಧಿಗೆ (Indira Gandhi) ರಾಜಕೀಯ ಮರು ಹುಟ್ಟು ನೀಡಲು ಚಿಕ್ಕಮಗಳೂರು ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಥಾನ ಬಿಟ್ಟುಕೊಟ್ಟಿದ್ದರು.
ಡಿ.ಬಿ.ಚಂದ್ರೇಗೌಡರು ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಈ ನಾಲ್ಕೂ ಸದನಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪಟೇಲ್ ಬೈರೇಗೌಡ, ಪುಟ್ಟಮ್ಮನವರ ಪುತ್ರರಾಗಿ 1936 ರ ಆಗಸ್ಟ್ 26 ರಂದು ಜನಿಸಿದ್ದ ಡಿ.ಬಿ.ಚಂದ್ರೇಗೌಡರು ವಕೀಲರಾಗಿ ವೃತ್ತಿ ಆರಂಭಿಸಿದ್ದರು.
ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಡಿ.ಬಿ. ಚಂದ್ರೇಗೌಡರು 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು.
1977 ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರ ಗಾಂಧಿ ಗೆ ಚಿಕ್ಕಮಗಳೂರಿನಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದರು.