ಕರ್ನಾಟಕದ ಪ್ರಸಿದ್ದ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಮೈಸೂರು ಜಿಲ್ಲಾ ವ್ಯಾಪ್ತಿಯ ಚಾಮುಂಡಿ ಬೆಟ್ಟದಲ್ಲಿ ಇನ್ನು ಮುಂದೆ ಧೂಮಪಾನ, ಮಧ್ಯಪಾನ, ಗುಟ್ಕಾ ಹಾಗೂ ದೇವರ ದರ್ಶನದ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸೆ.03 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಮೊದಲಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು. ಬಳಿಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಮೊದಲ ಸಭೆ ನಡೆಸಿ, ಕೆಲವೊಂದು ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟದಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್ ಬಳಕೆ, ಮದ್ಯಪಾನ, ಗುಟ್ಕಾ, ಪ್ಲಾಸ್ಟಿಕ್ ಬಳಕೆ ನಿಷೇದ ಮಾಡಲಾಗಿದೆ. ಜೊತೆಗೆ ಚಾಮುಂಡಿ ದೇವಿಯ ದರ್ಶನದ ಸಮಯದಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಚಾಮುಂಡಿ ಬೆಟ್ಟ ಮಾತ್ರವಲ್ಲದೇ ಎಲ್ಲಾ ದೇವಾಲಯಗಳಲ್ಲಿ ಸ್ಚಚ್ಚತೆಗೆ ಆದ್ಯತೆ ನೀಡಲಾಗುತ್ತದೆ. ಬೆಟ್ಟದಲ್ಲಿ ಸುರಕ್ಷತೆಯ ದೃಷ್ಟಿಯಿಂದ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ ಎಂದರು. ಇನ್ನೂ ಚಾಮುಂಡಿ ಬೆಟ್ಟ ಅಭಿವೃದ್ದಿ ದೃಷ್ಟಿಯಿಂದ ಪ್ರಾಧಿಕಾರ ರಚನೆ ಮಾಡಿದ್ದೇವೆ. ಭಕ್ತರಿಗೆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಧಿಕಾರ ರಚನೆ ಮಾಡಲಾಗಿದೆ. ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಟಾಸ್ಕ್ ಪೋರ್ಸ್ ರಚನೆ ಮಾಡುತ್ತೇವೆ. ದಸರಾ ಸಂದರ್ಭದಲ್ಲಿ ವಿವಿಧ ಮೂಲೆಗಳಿಂದ ಜನರು ಬರುತ್ತಾರೆ. ಆದ್ದರಿಂದ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಬದಗಿಸಬೇಕಿದೆ ಜೊತೆಗೆ ಬೆಟ್ಟದಲ್ಲಿ ಸ್ವಚ್ಚತೆ ಕಾಪಾಡಲು ಅಧಿಕಾರಿಗಳು ಕ್ರಮತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.

ಇನ್ನೂ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಮೊದಲ ಸಭೆ ನನ್ನ ಅಧ್ಯಕ್ಷತೆಯಲ್ಲಿ ನಡೆದಿದೆ ಎಂದಿರುವ ಸಿದ್ದರಾಮಯ್ಯನವರು ಹಿಂದೆಯಿದ್ದ ಸಮಿತಿ ಕ್ಷೇತ್ರ ಅಭಿವೃದ್ದಿ ಹಾಗೂ ಭಕ್ತರಿಗೆ ಮೂಲಸೌಕರ್ಯ ಒದಗಿಸುವ ಕಾರ್ಯ ಮಾಡುತ್ತಿತ್ತು. ಮಹದೇಶ್ವರ ಬೆಟ್ಟದ ಮಾದರಿಯಲ್ಲಿಯೇ ಚಾಮುಂಡೇಶ್ವರಿ ಕ್ಷೇತ್ರಕ್ಕೂ ಪ್ರಾಧಿಕಾರದ ರಚನೆಯನ್ನು ಮಾಡಲಾಗಿದೆ. ಪುಣ್ಯ ಕ್ಷೇತ್ರಕ್ಕೆ ಸಾವಿರಾರು ಭಕ್ತರ ಸಾಗರವೇ ಹರಿದು ಬರುತ್ತಾರೆ. ಆದ್ದರಿಂದ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಜೊತೆಗೆ ಹಲವು ಅಭಿವೃದ್ದಿ ಕೆಲಸಗಳೂ ಸಹ ನಡೆಯಬೇಕಿದೆ. ಚಾಮುಂಡಿ ಕ್ಷೇತ್ರ ಮಾತ್ರವಲ್ಲದೇ ಈ ಭಾಗದ ಹಲವು ದೇವಾಲಯಗಳ ಅಭಿವೃದ್ದಿಯೇ ಪ್ರಾಧಿಕಾರದ ಉದ್ದೇಶವಾಗಿದೆ ಎಂದರು.

ಇದರ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ:

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನವರು ತಮ್ಮ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್ ನಲ್ಲಿರುವಂತೆ, ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉತ್ಕೃಷ್ಟ ದರ್ಜೆಯ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಹಿಂದೆಯೂ ಇದೇ ರೀತಿಯ ಸಮಿತಿ ಇತ್ತು. ಆದರೆ ಈಗ ಪ್ರಾಧಿಕಾರದ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ.

ಶ್ರೀ ಪುಣ್ಯಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು. ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಶುಚಿತ್ವಕ್ಕೆ ಹೆಚ್ಚು ಶ್ರಮ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ ಹಾಗಾಗಿ ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆಯನ್ನು ಸಹ ಕಲ್ಪಿಸಬೇಕಿದೆ.

ಶ್ರೀ ಕ್ಷೇತ್ರವನ್ನು ಅಭಿವೃದ್ಧಿ ಗೊಳಿಸಲು ಹಣಕ್ಕೆ ಏನು ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ಯಾರೇ ಆದರೂ ಸರಿಯೇ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ. ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿಯ ಬಗ್ಗೆ ಕೋಟ್ಯಾಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು. ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮ್ಮಯ್ಯ, ಹರೀಶ್ ಗೌಡ, ಜಿ.ಟಿ.ದೇವೇಗೌಡ, ವಿವೇಕಾನಂದ ಸೇರಿ ಹಲವು ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Latest News