ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ.
ಬೌಲಿಂಗ್ ಮಾಡುವಾಗ ಎಡಗಾಲಿನ ಮಂಡಿ ಉಳುಕಿದ್ದರಿಂದ ಹಾರ್ದಿಕ್ ಪಾಂಡ್ಯ ಓವರ್ ಪೂರ್ಣಗೊಳಿಸದೇ ಹೊರನಡೆದಿದ್ದರು. ವಿರಾಟ್ ಕೊಹ್ಲಿ ಉಳಿದ ೩ ಎಸೆತ ಎಸೆದು ಓವರ್ ಪೂರ್ಣಗೊಳಿಸಿದ್ದರು.
ಹಾರ್ದಿಕ್ ಪಾಂಡ್ಯ ಗಾಯದಿಂದ ಶೀಘ್ರ ಚೇತರಿಸಿಕೊಳ್ಳುವುದು ಅನುಮಾನವಾಗಿದ್ದು, ಅಕ್ಟೋಬರ್ 22ರಂದು ನ್ಯೂಜಿಲೆಂಡ್ ವಿರುದ್ಧ ಧರ್ಮಶಾಲಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.
ಹಾರ್ದಿಕ್ ಪಾಂಡ್ಯ ಸದ್ಯದ ಪರಿಸ್ಥಿತಿಯಲ್ಲಿ ಎಡಗಾಲಿನ ಮೇಲೆ ಒತ್ತಡ ಹೇರುವಂತಿಲ್ಲ. ವೈದ್ಯರು ಸದ್ಯದ ಪರಿಸ್ಥಿತಿಯಲ್ಲಿ ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ತಂಡದ ಪ್ರಕಟಣೆ ತಿಳಿಸಿದೆ.
ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಸೋಲರಿಯದ ಎರಡು ತಂಡಗಳು ಅಂದರೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳಾಗಿವೆ. ಅಲ್ಲದೇ ವಿಶ್ವಕಪ್ ಅಂಕಪಟ್ಟಿಯಲ್ಲಿ ಅಗ್ರ 2 ಸ್ಥಾನಗಳಲ್ಲಿ ಇವೆ.